ಉಪ ಚುನಾವಣೆಯಲ್ಲಿ ಬಿಜೆಪಿ 100 ಕೋಟಿಗೂ ಅಧಿಕ ಹಣವನ್ನು ಖರ್ಚು ಮಾಡಿದೆ: ಸಿದ್ದರಾಮಯ್ಯ

ಉಪ ಚುನಾವಣೆಯಲ್ಲಿ ಬಿಜೆಪಿ 100 ಕೋಟಿಗೂ ಅಧಿಕ ಹಣವನ್ನು ಖರ್ಚು ಮಾಡಿದೆ: ಸಿದ್ದರಾಮಯ್ಯ

ದೆಹಲಿ: ಕರ್ನಾಟಕದಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯವರು ವಿಧಾನಸಭಾ ಕ್ಷೇತ್ರದಲ್ಲಿ 100 ಕೋಟಿ ರುಪಾಯಿಗೂ ಅಧಿಕ ಹಣವನ್ನು ಖರ್ಚು ಮಾಡಿ ಚುನಾವಣೆ ಗೆದ್ದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಮತದಾರರನ್ನೆಲ್ಲ ಭ್ರಷ್ಟರನ್ನಾಗಿ ಮಾಡುತ್ತಿದೆ. ಹಣ ಹಂಚಿಕೆ ಮಾಡುವುದರ ಮೂಲಕ ಚುನಾವಣೆ ನಡೆಸಿ ಗೆಲುವು ಸಾಧಿಸಿದೆ ಎಂದು ದೂರಿದ್ದಾರೆ.

ಕೆಪಿಸಿಸಿ ಅಧ್ಯಕ್ಷರ ಸ್ಥಾನಕ್ಕೆ ಯಾರನ್ನು ನೇಮಿಸಬೇಕು ಎಂಬುದರ ಕುರಿತು ಚರ್ಚೆಗೆ ತೆರಳಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜೊತೆ ಸುದೀರ್ಘ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಇಷ್ಟು ದಿನಗಳೇ ಕಳೆದರೂ ಬದಲಾವಣೆ ಆಗಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಸರ್ಕಾರದಲ್ಲಿ ಇಂದಿಗೂ ಎಷ್ಟೋ ಖಾತೆಗಳಿಗೆ ಸಚಿವರೇ ಇಲ್ಲ. ಎಲ್ಲ ಖಾತೆಗಳನ್ನು ಮುಖ್ಯಮಂತ್ರಿಗಳೇ ಇಟ್ಟುಕೊಂಡಿದ್ದಾರೆ. ಅದನ್ನು ಸಮರ್ಥವಾಗಿ ನಿಭಾಯಿಸುವಲ್ಲೂ ಯಡಿಯೂರಪ್ಪ ವಿಫಲರಾಗಿದ್ದಾರೆ. ಕೇವಲ ಅಧಿಕಾರಿಗಳನ್ನು ಇಟ್ಟುಕೊಂಡು ರಾಜ್ಯದಲ್ಲಿ ಸರ್ಕಾರವನ್ನು ನಡೆಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.