ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕೇರಳ ಸರ್ಕಾರ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕೇರಳ ಸರ್ಕಾರ

ದೆಹಲಿ: ಹೊಸ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ಕೇರಳ ಸರ್ಕಾರ ಸುಪ್ರೀಂಕೋರ್ಟ್‍ನಲ್ಲಿ ಆರ್ಜಿ ಸಲ್ಲಿಸಿದೆ. ಸಿಎಎ ಕುರಿತು ಕೇಂದ್ರಕ್ಕೆ ಸವಾಲು ಹಾಕಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪೌರತ್ವ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್ ಈಗಾಗಲೇ ವಿರುದ್ಧ 60 ಕ್ಕೂ ಹೆಚ್ಚು ಅರ್ಜಿಗಳನ್ನು ವಿಚಾರಣೆ ನಡೆಸುತ್ತಿದೆ.

ಕೇರಳ ಸರ್ಕಾರ ಸಲ್ಲಿಸಿರುವ ಆರ್ಜಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಭಾರತದ ಸಂವಿಧಾನದ 14 ನೇ ಪರಿಚ್ಛೇದದ ಅಡಿಯಲ್ಲಿ ಸಮಾನತೆಯ ಹಕ್ಕು, ಆರ್ಟಿಕಲ್ 21 ರ ಅಡಿಯಲ್ಲಿ ಜೀವಿಸುವ ಹಕ್ಕನ್ನು ಮತ್ತು 25ನೇ ವಿಧಿ ಅಡಿಯಲ್ಲಿ ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸಿದೆ. ಈ ಕಾಯ್ದೆಯು ಸಂವಿಧಾನದಲ್ಲಿನ ಜಾತ್ಯತೀತತೆಯ ಮೂಲ ತತ್ವಕ್ಕೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ಹೇಳಿದೆ.

ಈ ಹಿಂದೆ ಕೇರಳ ವಿಧಾನಸಭೆಯಲ್ಲಿ ಭಾರತದ ಸಂವಿಧಾನ ರೂಪಿಸಿರುವ ಜಾತ್ಯತೀತತೆಗೆ ವಿರುದ್ಧವಾಗಿದೆ ಎಂದು ನಿರ್ಣಯವನ್ನು ಅಂಗೀಕರಿಸಿತು. ಅಲ್ಲದೇ, ಈ ಕಾಯ್ದೆಯನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿತು.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಹೊಸ ಪೌರತ್ವ ಕಾಯ್ದೆಯನ್ನು ವಿರೋಧಿಸಲು ಒಗ್ಗೂಡಬೇಕೆಂದು 11 ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು.